ಹೆಚ್.ಡಿ. ಕುಮಾರಸ್ವಾಮಿ
ಮಾನ್ಯ ಮುಖ್ಯಮಂತ್ರಿ

ಸುದ್ದಿಗಳು

ರಾಜ್ಯದಲ್ಲಿ ಅಂತರ್ ರಾಷ್ಟ್ರೀಯ ಮಟ್ಟದ ವಿಶ್ವವಿದ್ಯಾನಿಲಯದ ಸ್ಥಾಪನೆ ಕನಸು - ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ

know_the_cm

ಬೆಂಗಳೂರು ಸೆಪ್ಟೆಂಬರ್ 05:

ರಾಜ್ಯದಲ್ಲಿ ಅಂತರ್ ರಾಷ್ಟ್ರೀಯ ಮಟ್ಟದ ವಿಶ್ವವಿದ್ಯಾನಿಲಯವನ್ನು ಸ್ಥಾಪಿಸುವ ಕನಸು ತಮಗಿದ್ದು ಶೀಘ್ರದಲ್ಲಿ ಈ ಕುರಿತು ಯೋಜಿಸಲಾಗುವುದು ಎಂದು ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ತಿಳಿಸಿದರು.

ಬೆಂಗಳೂರು ಕೇಂದ್ರ ವಿಶ್ವವಿದ್ಯಾಲಯದ ಸ್ನಾತಕೋತ್ತರ ಕಲಾ ವಿಭಾಗದ ನೂತನ ಕಟ್ಟಡವನ್ನು ಉದ್ಘಾಟಿಸಿ ಮಾತನಾಡಿದ ಅವರು ಶಿಕ್ಷಣದಿಂದ ಮಾತ್ರ ಸಮಾಜದಲ್ಲಿ ಬದಲಾವಣೆ ಸಾಧ್ಯ. ಉತ್ತಮ ಶಿಕ್ಷಣ ನೀಡಲು ಅಗತ್ಯವಿರುವ ಅಂಶಗಳನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು ರಾಜ್ಯದಲ್ಲಿ ಅಂತರ್ ರಾಷ್ಟ್ರೀಯ ಮಟ್ಟದ ವಿಶ್ವವಿದ್ಯಾನಿಲಯವೊಂದನ್ನು ಸ್ಥಾಪಿಸುವ ತಮ್ಮ ಕನಸಿಗೆ ರೂಪ ನೀಡಲು ಶೀಘ್ರದಲ್ಲಿ ಕ್ರಮ ಕೈಗೊಳ್ಳಲಾಗುವುದು ಎಂದರು.

ವಿಶ್ವವಿದ್ಯಾನಿಲಯಗಳ ಕುಲಪತಿಗಳ ಆಯ್ಕೆ ಆಯಾ ವಿಶ್ವವಿದ್ಯಾನಿಲಯಗಳ ಅಭಿವೃದ್ಧಿಯನ್ನು ಹಾಗೂ ಗುಣಮಟ್ಟವನ್ನು ನಿರ್ಧರಿಸುತ್ತದೆ. ಹಾಗಾಗಿ ವಿಶ್ವವಿದ್ಯಾನಿಲಯಗಳಿಗೆ ಕುಲಪತಿಗಳನ್ನು ಹಾಗೂ ಸಿಂಡಿಕೇಟ್ ಸದಸ್ಯರನ್ನು ಆಯ್ಕೆ ಮಾಡುವಾಗ ರಾಜಕೀಯೇತರ ಉತ್ತಮ ಜ್ಞಾನಿಗಳನ್ನು ಆಯ್ಕೆ ಮಾಡಬೇಕು ಅದಕ್ಕಾಗಿ ಶೀಘ್ರದಲ್ಲಿ ಸಮಿತಿಯೊಂದನ್ನು ರಚಿಸಿ ಅದರ ಮೂಲಕ ಆಯ್ಕೆಮಾಡಲು ನಿರ್ಧರಿಸಲಾಗಿದೆ.

ರಾಜ್ಯದಲ್ಲಿ ಶಿಕ್ಷಣಕ್ಕಾಗಿ ಪ್ರಾಥಮಿಕ, ಪ್ರೌಢ ಹಾಗೂ ಪದವೀಧರ ಕಾಲೇಜುಗಳಲ್ಲಿ ಇರುವ ಅವಶ್ಯವಿರುವ ಮೂಲಭೂತ ಸೌಕರ್ಯ ಅಭಿವೃದ್ಧಿಗಾಗಿ 1000 ಕೋಟಿ ಬಿಡುಗಡೆ ಮಾಡಲು ತೀರ್ಮಾನಿಸಲಾಗಿದೆ. ಸಮಾಜದಲ್ಲಿ ಎಲ್ಲರಿಗೂ ಗುಣಮಟ್ಟದ ಶಿಕ್ಷಣ ದೊರಕಲು ಅಗತ್ಯವಿರುವ ಸಲಹೆಗಳನ್ನು ಸರ್ಕಾರಕ್ಕೆ ಶಿಕ್ಷಣ ಕ್ಷೇತ್ರದ ಪರಿಣಿತರು ಮುಕ್ತವಾಗಿ ನೀಡಲು ಮನವಿ ಮಾಡಿದ ಮುಖ್ಯಮಂತ್ರಿಗಳು ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ ತಮ್ಮ ಸರ್ಕಾರ ನೀಡಲಿದೆ ಎಂದು ಹೇಳಿದರು.