ಹೆಚ್.ಡಿ. ಕುಮಾರಸ್ವಾಮಿ
ಮಾನ್ಯ ಮುಖ್ಯಮಂತ್ರಿ

ಸುದ್ದಿಗಳು

ಪ್ರಾಥಮಿಕ, ಪ್ರೌಢಶಾಲೆ ಮತ್ತು ಕಾಲೇಜುಗಳ ಮೂಲಭೂತ ಸೌಕರ್ಯ ತ್ವರಿತ ಕಾಮಗಾರಿಗೆ ಮುಖ್ಯಮಂತ್ರಿ ಸೂಚನೆ

know_the_cm

ಗೃಹ ಕಛೇರಿ ಕೃಷ್ಣಾ (ಬೆಂಗಳೂರು) ಸೆಪ್ಟೆಂಬರ್ 04:

ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಶಾಲೆಗಳಲ್ಲಿ ಹೆಚ್ಚುವರಿ ಕೊಠಡಿ ಮತ್ತು ಶೌಚಾಲಯ ನಿರ್ಮಾಣಕ್ಕೆ 150 ಕೋಟಿ ರೂ ಅನುದಾನವನ್ನು ಈಗಾಗಲೇ ಬಿಡುಗಡೆ ಮಾಡಲಾಗಿದ್ದು . ತ್ವರಿತವಾಗಿ ಟೆಂಡರ್ ಕರೆದು ಕಾಮಗಾರಿ ಕೈಗೊಳ್ಳಲು ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಅವರು ಸೂಚಿಸಿದರು.

ರಾಜ್ಯದಲ್ಲಿನ ಪ್ರಥಮ ದರ್ಜೆ, ಪದವಿಪೂರ್ವ ಹಾಗೂ ತಾಂತ್ರಿಕ ಶಿಕ್ಷಣ ಕಾಲೇಜುಗಳು, ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ನಬಾರ್ಡ್ ವತಿಯಿಂದ ಮೂಲಭೂತ ಸೌಲಭ್ಯಗಳನ್ನು ಒದಗಿಸುವ ಕುರಿತು ಜರುಗಿದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ರಾಜ್ಯದ ಒಟ್ಟು 502 ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಕೊಠಡಿಗಳ ದುರಸ್ತಿ ಮತ್ತು ನಿರ್ಮಾಣಕ್ಕಾಗಿ 300 ಕೋಟಿ ರೂ.ಗಳ ಪ್ರಸ್ತಾವನೆಯನ್ನು ಸಲ್ಲಿಸಲಾಗಿದ್ದು, ರಾಜ್ಯದ 233 ಸರ್ಕಾರಿ ಪ್ರೌಢಶಾಲೆಗಳನ್ನು ನೆಲಸಮಗೊಳಿಸಿ ಮರುನಿರ್ಮಾಣಕ್ಕೆ 7890.75 ಲಕ್ಷ ರೂ.ಗಳ ಪ್ರಸ್ತಾವನೆಯನ್ನು ಈಗಾಗಲೇ ಇಲಾಖೆ ವತಿಯಿಂದ ಸಲ್ಲಿಸಲಾಗಿದ್ದು, ಕಾಮಗಾರಿಗೆ ಟೆಂಡರ್ ಪ್ರಕ್ರಿಯೆ ಕೈಗೊಳ್ಳುವಂತೆ ಮುಖ್ಯಮಂತ್ರಿಗಳು ಸೂಚಿಸಿದರು.

2018-19ನೇ ಸಾಲಿನ ಆಯವ್ಯಯದಲ್ಲಿ ನಬಾರ್ಡ್ ಕಾಮಗಾರಿಗಳಿಗೆ ರೂ.5.76 ಕೋಟಿಗಳನ್ನು ಹಂಚಿಕೆ ಮಾಡಲಾಗಿದ್ದು, ಅವಶ್ಯವಿರುವ ರೂ.39.42 ಕೋಟಿಗಳನ್ನು ಬಿಡುಗಡೆ ಮಾಡುವಂತೆ ಆರ್ಥಿಕ ಇಲಾಖೆಯ ಅಧಿಕಾರಿಗಳಿಗೆ ಅವರು ಸೂಚಿಸಿದರು.

ಕಾಲೇಜು ಶಿಕ್ಷಣ ಇಲಾಖೆಯಲ್ಲಿ 395 ಪ್ರಾಂಶುಪಾಲರನ್ನು ನೇಮಕ ಮಾಡಿಕೊಳ್ಳಬೇಕಿದ್ದು, 480 ಉಪನ್ಯಾಸಕರ ಹುದ್ದೆಗಳು ಖಾಲಿ ಇವೆ. ಒಟ್ಟಾರೆ 3000 ಹುದ್ದೆಗಳ ಸೃಜನೆ ಆಗಬೇಕಿದೆ ಎಂದು ಕಾಲೇಜು ಶಿಕ್ಷಣ ಇಲಾಖೆ ಆಯುಕ್ತರಾದ ಎನ್.ಮಂಜುಳಾ ಸಭೆಯ ಗಮನಕ್ಕೆ ತಂದರು. ಈ ಕುರಿತು ಪ್ರಸ್ತಾವನೆಯನ್ನು ಆರ್ಥಿಕ ಇಲಾಖೆಗೆ ಸಲ್ಲಿಸುವಂತೆ ಮುಖ್ಯಮಂತ್ರಿಗಳು ಸೂಚಿಸಿದರು.

ಸಭೆಯಲ್ಲಿ ಪ್ರಾಥಮಿಕ ಪ್ರೌಢ ಶಿಕ್ಷಣ ಇಲಾಖೆ ಸಚಿವ ಜಿ.ಟಿ.ದೇವೇಗೌಡ, ಲೋಕೋಪಯೋಗಿ ಇಲಾಖೆ ಸಚಿವ ಹೆಚ್.ಡಿ.ರೇವಣ್ಣ, ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್ ಉಪಸ್ಥಿತರಿದ್ದರು, ಮುಖ್ಯ ಮಂತ್ರಿಗಳ ಅಪರ ಮುಖ್ಯ ಕಾರ್ಯದರ್ಶಿ ಇ. ವಿ.ರಮಣರೆಡ್ಡಿ, ಕಾರ್ಯದರ್ಶಿ ಸೆಲ್ವಕುಮಾರ್, ಮತ್ತಿತರು ಉಪಸ್ಥಿತರಿದ್ದರು.

ಫೋಟೋ: ದಿ ಹಿಂದೂ

-----------------------------------------------------------------------------

know_the_cm

ಗೃಹ ಕಛೇರಿ ಕೃಷ್ಣಾ (ಬೆಂಗಳೂರು) ಸೆಪ್ಟೆಂಬರ್ 04:

ಶಿಕ್ಷಣ ಗುಣಮಟ್ಟ ಸುಧಾರಣೆ: ಸಮಗ್ರ ವರದಿ ಸಲ್ಲಿಸಲು ಸಿಎಂ ಸೂಚನೆ

ಸರ್ಕಾರಿ ಶಾಲೆಗಳಲ್ಲಿ ಉತ್ತಮ ಗುಣಮಟ್ಟದ ಶಿಕ್ಷಣ ಒದಗಿಸಲು ಯಾವುದೇ ರೀತಿಯ ರಾಜಿ ಮಾಡಿಕೊಳ್ಳಬಾರದು. ಈ ನಿಟ್ಟಿನಲ್ಲಿ ಚಿಂತನೆ ನಡೆಸಿ ಶಿಕ್ಷಣ ಗುಣಮಟ್ಟದ ಸುಧಾರಣೆಗೆ ಕೈಗೊಳ್ಳಬಹುದಾದ ಕ್ರಮಗಳ ಕುರಿತು ವರದಿಯನ್ನು ಸಲ್ಲಿಸುವಂತೆ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿಯವರು ಶಿಕ್ಷಣ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು.

ಸರ್ಕಾರಿ ಶಾಲೆಯಲ್ಲಿ ಓದುವವರು ಹೆಚ್ಚಾಗಿ ಬಡವರ ಮಕ್ಕಳೇ ಆಗಿರುತ್ತಾರೆ. ಆದ್ದರಿಂದ ಅವರಿಗೆ ಉತ್ತಮ ಭವಿಷ್ಯ ರೂಪಿಸಲು ನೆರವಾಗುವಂತಹ ಶಿಕ್ಷಣ ಒದಗಿಸುವುದು ನಮ್ಮ ಸರ್ಕಾರದ ಆದ್ಯತೆಗಳಲ್ಲಿ ಒಂದು. ಈ ಹಿನ್ನೆಲೆಯಲ್ಲಿ ನವದೆಹಲಿಯಲ್ಲಿ ಸರ್ಕಾರಿ ಶಾಲೆಗಳಲ್ಲಿ ಮಾಡಿರುವ ಸುಧಾರಣಾ ಕ್ರಮಗಳ ಕುರಿತು ಅಧ್ಯಯನ ಮಾಡಿ ರಾಜ್ಯದಲ್ಲಿ ಅಳವಡಿಸಬಹುದಾದ ಪದ್ಧತಿಗಳ ಬಗ್ಗೆ ಸಮಗ್ರ ವರದಿಯ ನೀಡುವಂತೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್ ಹಾಗೂ ಶಿಕ್ಷಣ ಇಲಾಖೆ ಆಯುಕ್ತ ಶ್ರೀ ಡಾ. ಪಿ. ಸಿ ಜಾಫರ್ ರವರಿಗೆ ಸೂಚಿಸಿದರು.

ಈ ಸಂದರ್ಭದಲ್ಲಿ ಶಿಕ್ಷಕರ ನೇಮಕಾತಿ, ಶಾಲಾ ಕಟ್ಟಡಗಳ ಮೂಲಸೌಕರ್ಯಗಳ ಅಭಿವೃದ್ಧಿಗೆ ನಬಾರ್ಡ್ ನೆರವು ಪಡೆಯುವ ಕುರಿತು ಚರ್ಚಿಸಲಾಯಿತು.

ಫೋಟೋ: ದಿ ಹಿಂದೂ